DoubleClickMedia
ವಿಶ್ವಗುರುವಿಗೆ ತಮ್ಮ ಪಕ್ಷದಿಂದ ವಿರೋಧ ಪಕ್ಷದ ನಾಯಕನನ್ನು ಆರಿಸಲು ಸಾಧ್ಯವಾಗಿಲ್ಲ: ಸಿಎಂ

ಬೆಂಗಳೂರು, ಜುಲೈ, 20: ಬಿಜೆಪಿಯವರು ವಿಶ್ವಗುರುವಿನ ಬಗ್ಗೆ ಭರ್ಜರಿ ಭಾಷಣ ಬಿಗಿಯುತ್ತಾರೆ. ಆದರೆ ಆ ವಿಶ್ವಗುರುವಿಗೆ ತಮ್ಮದೇ ಪಕ್ಷದಲ್ಲಿ ಒಬ್ಬ ವಿರೋಧ ಪಕ್ಷದ ನಾಯಕನನ್ನು ಆರಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಸಿಎಂ ಕುಹಕವಾಡಿದ್ದಾರೆ.
ಅವರು ಇಂದು ವಿಧಾನಸಭೆಯಲ್ಲಿ 2023-24ನೇ ಸಾಲಿನ ಬಜೆಟ್ ಕುರಿತ ಚರ್ಚೆಗೆ ಉತ್ತರ ನೀಡುತ್ತಾ 15 ನೇ ಹಣಕಾಸು ಆಯೋಗದಿಂದ ಕರ್ನಾಟಕಕ್ಕೆ ಅನ್ಯಾಯವಾಗಿದ್ದು ಕೇಂದ್ರದಿಂದ ಬರಬೇಕಾದ ರಾಜ್ಯದ ಪಾಲಿನ 5,495 ಕೋಟಿ ಬರಲಿಲ್ಲ. ಇದನ್ನು ಕರ್ನಾಟಕದ ಸಂಸದರು ಪ್ರಶ್ನಿಸಬೇಕಿತ್ತು. ರಾಜ್ಯದ ಬಿಜೆಪಿ ನಾಯಕರು, ಆಗಿನ ಮುಖ್ಯಮಂತ್ರಿಗಳು ಪ್ರಶ್ನಿಸಬೇಕಿತ್ತು. ಆದರೆ ಇವರೆಲ್ಲಾ ಮೋದಿ ಎದುರು ನಿಂತು ಕನ್ನಡಿಗರ ಪಾಲನ್ನು ಕೇಳಲು ಚಳಿ ಜ್ವರ ಬಂದವರಂತೆ ನಡುಗುತ್ತಾರೆ ಎಂದು ಸಿಎಂ ವ್ಯಂಗ್ಯವಾಡಿದರು.
ಗ್ಯಾರಂಟಿ ಕಾರ್ಯಕ್ರಮಗಳ ಮೂಲಕ ದೇಶದಲ್ಲಿಯೇ ದೊಡ್ಡ ಮೊತ್ತ ನೀಡುತ್ತಿರುವ
ಮೊದಲ ರಾಜ್ಯ ಕರ್ನಾಟಕವಾಗಿದ್ದು, ವಿರೋಧ ಪಕ್ಷದವರು ಗ್ಯಾರಂಟಿ ಯೋಜನೆಗಳು ಜಾರಿ ಸಾಧ್ಯವಿಲ್ಲ ಎಂದಿದ್ದರು ಆದರೆ ಈಗಾಗಲೇ 3 ಯೋಜನೆಗಳು ಜಾರಿಯಾಗಿವೆ. ಗೃಹ ಲಕ್ಷ್ಮಿ ಯೋಜನೆಗೆ ನೋಂದಣಿ ಪ್ರಾರಂಭವಾಗಿದೆ. ಅಲ್ಲದೇ ಯುವನಿಧಿ ಯೋಜನೆ ಇದೇ ಡಿಸೆಂಬರ್ ತಿಂಗಳಿನಿಂದ ಪ್ರಾರಂಭವಾಗುವ ನಿರೀಕ್ಷೆ ಇದೆ ಎಂದು ತಿಳಿಸಿದರು. ಈ ಐದು ಗ್ಯಾರಂಟಿಗಳ ಮೂಲಕ ಸಾರ್ವತ್ರಿಕ ಮೂಲ ಆದಾಯದ ಪರಿಕಲ್ಪನೆಯನ್ನು ಪರಿಚಯಿಸುತ್ತಿರುವ ಮೊದಲ ರಾಜ್ಯ ಕರ್ನಾಟಕವಾಗಿದ್ದು ಇದು ಕರ್ನಾಟಕ ಅಭಿವೃದ್ಧಿ ಮಾದರಿ ಎಂದು ಅವರು ವಿಧಾನಸಭೆಯಲ್ಲಿ ತಿಳಿಸಿದರು.
’ಗುಜರಾತ್ ಮಾದರಿಯಲ್ಲಿ ಪೆನ್ನು, ಪೆನ್ಸಿಲ್, ಬಿಸ್ಕೆಟ್, ಬೆಣ್ಣೆ, ಮಂಡಕ್ಕಿ ಮೇಲೂ ಟ್ಯಾಕ್ಸ್ ಹಾಕಲಾಗಿದೆ. ಆದರೆ ಕರ್ನಾಟಕ ಮಾದರಿಯಲ್ಲಿ ಪ್ರತಿ ಕುಟುಂಬಕ್ಕೆ ಪ್ರತಿ ತಿಂಗಳು ಆರರಿಂದ ಎಂಟು ಸಾವಿರ ರೂಪಾಯಿ ಉಪಯೋಗ ಆಗುವಂತಹ ಕಾರ್ಯಕ್ರಮಗಳನ್ನು ನೀಡಿದ್ದೇವೆ. ಇದು ಬಿಜೆಪಿಯ ಹೊಟ್ಟೆಕಿಚ್ಚಿಗೆ ಕಾರಣವಾಗಿದೆ’ ಎಂದು ಅವರು ಆರೋಪಿಸಿದರು.
"ಈ ಕಾರ್ಯಕ್ರಮಗಳಿಗೆ ವಾರ್ಷಿಕ ಒಟ್ಟು 52, 068 ಕೋಟಿ ರೂ.ಗಳು ಅಗತ್ಯವಿದೆ. 1.30 ಕೋಟಿ ಕುಟುಂಬಗಳು ಈ ಯೋಜನೆಗಳ ಲಾಭ ಪಡೆಯಲಿವೆ. ದೇಶದ ಇತಿಹಾಸದಲ್ಲೇ ಇಷ್ಟೊಂದು ದೊಡ್ಡ ಮೊತ್ತದ ಯೋಜನೆಗಳನ್ನು ಜಾತಿ ಧರ್ಮ ನೋಡದೇ ಮಾಡಿರುವ ಮೊದಲ ರಾಜ್ಯ ಕರ್ನಾಟಕ" ಎಂದು ಸಿಎಂ ತಿಳಿಸಿದರು. ಈ ವರ್ಷ 35,410 ಕೋಟಿಗಳನ್ನು 5 ಗ್ಯಾರೆಂಟಿಗಳಿಗೆ ಮೀಸಲಿರಿಸಲಾಗಿದೆ ಎಂದು ಅವರು ವಿವರಿಸಿದರು.
ಬೆಲೆ ಏರಿಕೆ, ಇಂಧನ ಬೆಲೆ ಏರಿಕೆ, ನಿರುದ್ಯೋಗ ಮೊದಲಾದ ಸಮಸ್ಯೆಗಳಿಂದ ತತ್ತರಿಸಿರುವ ಜನರ ಬದುಕು ಸುಧಾರಿಸುವ ಉದ್ದೇಶದಿಂದ ಈ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಅವರು ತಿಳಿಸಿದರು.